ದೇಶದ ಆರ್ಥಿಕತೆಯ ಚಿತ್ರಣವನ್ನೇ ಬದಲಿಸುವ ಬಜೆಟ್: ಸಚಿವ ನಿರಾಣಿ
ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಸಮಯದಲ್ಲಿ ಜನಪ್ರಿಯ ಬಜೆಟ್ ಎನಿಸಿಕೊಳ್ಳಬೇಕೆಂಬ ಹಂಬಲ ತೊರೆದು, ದೂರದೃಷ್ಟಿಯ ಬಜೆಟ್ ಮಂಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್ ನಿರಾಣಿ ಹೇಳಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ದೇಶದ ಆರ್ಥಿಕತೆಯ ಚಿತ್ರಣವನ್ನೇ ಬದಲಿಸುವ ಬಜೆಟ್ ಇದಾಗಿದೆ. ಆರ್ಥಿಕತೆಗೆ ಚೈತನ್ಯ ತುಂಬುವ ಜತೆಗೆ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿ ಹೊಂದಿರುವ ಬಜೆಟ್ ನೀಡಿರುವ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಅಅಭಿನಂದಿಸುತ್ತೇನೆ ಎಂದಿದ್ದಾರೆ.
ಕೊವಿಡ್ ನಂತರದ ಆರ್ಥಿಕ ಸುಧಾರಣೆ ಮತ್ತು ಉದ್ಯೋಗ ಸೃಷ್ಟಿ ಇಂದಿನ ತುರ್ತು ಅಗತ್ಯತೆ. ಇಂದಿನ ಬಜೆಟ್ ಈ ಎಲ್ಲ ಅಂಶಗಳನ್ನು ಒಳಗೊಂಡಿದೆ. 2022ರಲ್ಲಿ ಆರ್ಥಿಕತೆ ಶೇ.9.2ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದ್ದು, ಮುಂದಿನ 25 ವರ್ಷದ ಗುರಿಯಾಗಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ಇದರಿಂದ ಕರ್ನಾಟಕದ ಉದ್ಯಮ ಕ್ಷೇತ್ರದ ಬೆಳವಣಿಗೆಗೆ ಇನ್ನೂ ಹೆಚ್ಚಿನ ಅನುಕೂಲ ಆಗಲಿದೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ.45ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣ ಮತ್ತಷ್ಟು ಏರುವ ವಿಶ್ವಾಸ ಇದೆ ಎಂದು ನಿರಾಣಿ ಇದೇ ಸಂದರ್ಭದಲ್ಲಿ ತಿಳಿಸಿದರು.