ಕೊರೊನಾ ನಾಲ್ಕನೇ ಅಲೆ ಹಿನ್ನೆಲೆ; ಇಂದು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಬೆಂಗಳೂರು; ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಭೀತಿ ಉಂಟಾಗಿದೆ. ಈಗಾಗಲೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 12.30ಕ್ಕೆ ಸಭೆ ಕರೆದಿದ್ದಾರೆ. ಕಂದಾಯ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರೂ ಸಭೆಯಲ್ಲಿ ಹಾಜರಿರಲಿದ್ದು, ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 27ರಂದು ಕೊರೊನಾ ಸಂಬಂಧ ಸಭೆ ಕರೆದಿದ್ದಾರೆ. ನಾಲ್ಕು ಅಲೆ ವೇಗವಾಗಿ ಹರಡಲು ಶುರು ಮಾಡಿದ್ದು, ಒಮಿಕ್ರಾನ್ ಭೀತಿ ಹುಟ್ಟಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಹಾಗೂ ರಾಜ್ಯಗಳಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು, ಎಲ್ಲಾ ಸಿಎಂಗಳ ಜೊತೆ ವರ್ಚುಯಲ್ ಮೀಟಿಂಗ್ ನಡೆಸಲಿದ್ದಾರೆ. ಈ ಸಭೆಗೂ ಮುನ್ನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಅಧಿಕಾರಿಗಳ ಉನ್ನತಮಟ್ಟದ ಸಭೆ ನಡೆಸುತ್ತಿದ್ದಾರೆ.