ದೆಹಲಿಯಲ್ಲಿ ಭಾರಿ ಬೆಂಕಿ ದುರಂತ; 27 ಮಂದಿ ಸಜೀವದಹನ
ನವದೆಹಲಿ; ದೆಹಲಿಯಲ್ಲಿ ಕಳೆದ ರಾತ್ರಿ ಭಿಕರ ದುರಂತ ಸಂಭವಿಸಿದೆ. ಇಲ್ಲಿನ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯಿರುವ ಕಟ್ಟಡವೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 27 ಮಂದಿ ಸಜೀವ ದಹನವಾಗಿದ್ದು, 12 ಮಂದಿ ಸುಟ್ಟು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾತ್ರಿಯೇ ರಾತ್ರಿ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಿಸಿಟಿವಿ ಕ್ಯಾಮೆರಾ ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯನ್ನು ಹೊಂದಿರುವ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ನಡೆದಿದೆ. ಹೀಗಾಗಿ ಕಂಪನಿಯ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಬಂಧಿಸಲಾಗಿದೆ. ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸಿದ್ದಾರೆ. ಈ ಕಟ್ಟಡದ ಮಾಲೀಕರನ್ನು ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಆದಷ್ಟು ಬೇಗ ಕಟ್ಟಡದ ಮಾಲೀಕನನ್ನು ಬಂಧಿಸಲಾಗುವುದು ಎಂದು ಡಿಸಿಪಿ ಸಮೀರ್ ಶರ್ಮಾ ತಿಳಿಸಿದ್ದಾರೆ.