Bengaluru

ದೇವೇಗೌಡರ 90ನೇ ಹುಟ್ಟುಹಬ್ಬ; ಮೋದಿ ಸೇರಿ ಗಣ್ಯರ ಶುಭಾಶಯ

ಬೆಂಗಳೂರು; ಮಾಜಿ ಪ್ರಧಾನಿ ದೇವೇಗೌಡರು ಇಂದು ತಮ್ಮ 90ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇಂದು ಬೆಳಗ್ಗೆಯೇ ಅವರು ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲ್ಲಿದ್ದಾರೆ. ಅನಂತರ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಅವರು ದೇವೇಗೌಡರನ್ನು ಭೇಟಿ ಮಾಡಿ, ಹುಟ್ಟುಹಬ್ಬಕ್ಕೆ ಶುಭ ಕೋರಿದರು.

ಇನ್ನೊಂದೆಡೆ ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌, ಲೋಕಸಭಾ ಸಭಾಪತಿ ಓಂ ಬಿರ್ಲಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕರು ಶುಭ ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದು, ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಎಚ್‌.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಆಯುಷ್ಯ, ಆರೋಗ್ಯಕರ ಜೀವನವನ್ನು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಹೂಗುಚ್ಛ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು. ಇನ್ನು ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಟ್ವೀಟ್‌ ಮೂಲಕ ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

Share Post