ಕರಾವಳಿ ಹಾಗೂ ಮಲೆನಾಡಿನಲ್ಲಿ ಇನ್ನೂ ನಾಲ್ಕು ದಿನ ಮಳೆ; ಆರೆಂಜ್ ಅಲರ್ಟ್
ಬೆಂಗಳೂರು; ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅವಾಂತರದಿಂದ ಜನ ತತ್ತರಿಸಿದ್ದಾರೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಜುಲೈ 9ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕಳಸ, ಎನ್.ಆರ್ ಪುರ, ಕೊಪ್ಪ, ಶೃಂಗೇರಿ ಹಾಗೂ ಚಿಕ್ಕಮಗಳೂರು(ಲಕ್ಯಾ, ಅಂಬಳೆ ಹೋಬಳಿ ಹೊರತು ಪಡಿಸಿ) ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ 3 ದಿನಗಳ ಕಾಲ ವರುಣನ ಆರ್ಭಟ ಜೋರಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಬುಧವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಜಾರಿ ಮಾಡಲಾಗಿದೆ.