CrimeDistricts

ನಾಡಿನ ಪ್ರತಿಷ್ಠಿತ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಮೈಸೂರು; ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಮಠದ ಪ್ರೌಢ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮೈಸೂರಿನಲ್ಲಿ ದೂರು ದಾಖಲಿಸಲಾಗಿದೆ. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ಹೈಸ್ಕೂಲು ವಿದ್ಯಾರ್ಥಿ ನಿಲಯದ ಇಬ್ಬರು ವಿದ್ಯಾರ್ಥಿನಿಯರು ಸ್ವಾಮೀಜಿ ವಿರುದ್ಧ ಆರೋಪ ಮಾಡಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸ ಇಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಒಡನಾಡಿ ಸಂಸ್ಥೆಯ ನೆರವಿನೊಂದಿಗೆ ಮೈಸೂರಿನ ನಜರಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್‌ ಠಾಣೆಯಲ್ಲಿ ಪೋಕ್ಸೋ ಅಡಿ ಶುಕ್ರವಾರ ದೂರು ದಾಖಲಾಗಿದೆ. ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ. ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆʼ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share Post