National

ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ

ನವದೆಹಲಿ; ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ಉಮೇಶ್‌ ಕತ್ತಿ ಅವರ ನಿಧನದಿಂದ ಬಹಳ ನೋವಾಗಿದೆ ಎಂದು ಹೇಳಿದ್ದಾರೆ.

ಮೋದಿ ಟ್ವೀಟ್‌ನಲ್ಲೇನಿದೆ..?

‘ಉಮೇಶ್ ಕತ್ತಿ ಅನುಭವೀ ನಾಯಕ. ಕರ್ನಾಟಕದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಅಗಲುವಿಕೆಯಿಂದ ನೋವಾಗಿದೆ. ಈ ದುಃಖದ ಸನ್ನಿವೇಶದಲ್ಲಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೋವು ಸಹಿಸುವ ಶಕ್ತಿ ದೊರೆಯಲೆಂದು ಪ್ರಾರ್ಥನೆ. ಓಂ ಶಾಂತಿ’

ಹೀಗಂತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ. ಉಮೇಶ್‌ ಕತ್ತಿ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದಾಗ ಅಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಬಳಿಕ ಅವರನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿದ್ದವು.

Share Post