ಪ್ರವೀಣ್ ನೆಟ್ಟಾರು ಮನೆಯವರಿಗೆ ನನ್ನ ಕಚೇರಿಯಲ್ಲೇ ಕೆಲಸ; ಸಿಎಂ ಬೊಮ್ಮಾಯಿ ಭರವಸೆ
ಬೆಂಗಳೂರು; ಇತ್ತೀಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ನನ್ನ ಕಚೇರಿಯಲ್ಲಿಯೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರದ ಜನಸ್ಪಂದನ ಸಮಾವೇಶದಲ್ಲಿ ಅವರು ಮಾತನಾಡಿದರು.
ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಹೀಗಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ಕುಟುಂಬಕ್ಕೆ ನೆರವಾಗುವುದು ನಮ್ಮ ಕರ್ತವ್ಯ ಎಂದು ಸಿಎಂ ಹೇಳಿದರು. ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಮೃತಪಟ್ಟಿದ್ದರು.