ವಿಮ್ಸ್ನಲ್ಲಿ ಮೂವರ ಸಾವು ಪ್ರಕರಣ; ಉನ್ನತ ಮಟ್ಟದ ಸಮಿತಿ ರಚನೆ
ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ರೋಗಿಗಳು ಸಾವನ್ನಪ್ಪಿರುವ ಪ್ರಕರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಸರ್ಕಾರದ ಮೇಲೆ ಪ್ರತಿಪಕ್ಷದ ನಾಯಕರು ಹರಿಹಾಯ್ತಿದ್ದಾರೆ. ಇದರ ಬೆನ್ನಲ್ಲೇ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ಪ್ರಕರಣದ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚನೆ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯ ತನಿಖಾ ವರದಿ ಕೈಸೇರಿದ ಕೂಡಲೇ ಕರ್ತವ್ಯ ಲೋಪವೆಸಗಿ ಅಮಾಯಕ ರೋಗಿಗಳ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.