ಕಾಂಗ್ರೆಸ್ ನಿಂದ ಜ.8ರಂದು ಪರಿಶಿಷ್ಟ ಜಾತಿ, ಪಂಗಡಗಳ ಐಕ್ಯತಾ ಸಮಾವೇಶ
ಬೆಂಗಳೂರು; ಜನವರಿ 8ರಂದು ಕಾಂಗ್ರೆಸ್ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಐಕ್ಯತಾ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಚಾರ ತಿಳಿಸಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ಸಮಾಜದಲ್ಲಿ ಶೋಷಿತ ವರ್ಗಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಅಂದಿನಿಂದ ಇಲ್ಲಿಯವರೆಗೂ ಈ ಸಮುದಾಯಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಲೇ ಬಂದಿವೆ. ಕಾಂಗ್ರೆಸ್ ಪಕ್ಷ ಕೂಡ ಅವರ ಕ್ಷೇಮಾಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಕಾನೂನು ತರುವ ಮೂಲಕ ಭಾರತದಲ್ಲಿ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಅವುಗಳನ್ನು ಜಾರಿಗೆ ತರಲು ಎಲ್ಲ ಪ್ರಯತ್ನ ಮಾಡಿದೆ ಎಂದು ಪರಮೇಶ್ವರ್ ಹೇಳಿದರು.
ಕರ್ನಾಟಕದಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ, ಬಡತನ ರೇಖೆಯಿಂದ ಹೊರಗೆ ಮುಖ್ಯವಾಹಿನಿಗೆ ತರಲು ಕಾನೂನಾತ್ಮಕವಾಗಿ ಕೆಲಸ ಮಾಡಿಕೊಂಡು ಬಂದಿದೆ. ಇಂದು ಬೇರೆ ಬೇರೆ ಪಕ್ಷಗಳು ಅವರ ಮನವೊಲಿಸುವ ಪ್ರಯತ್ನ ಮಾಡುತ್ತಿವೆ. ಯಾವ ಪಕ್ಷಗಳು ಅವರ ಯೋಗಕ್ಷೇಮಕ್ಕೆ ಪ್ರಯತ್ನಿಸಲಿಲ್ಲ. ಪಕ್ಷದ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಪೋಟೋಗಳನ್ನು ಹಾಕಿಕೊಳ್ಳದವರು ಇಂದು ದಲಿತರ ಮನೆಗಳಲ್ಲಿ ಮಲಗಲು, ಬೇರೆ ಹೊಟೇಲ್ ನಿಂದ ಊಟ ತಂರಿಸಿ ತಿಂದು ಬರುತ್ತಿದ್ದಾರೆ ಎಂದು ಪರಮೇಶ್ವರ್ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್ ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ಹೆಚ್. ಆಂಜನೇಯ ಮುಂತಾದವರಿದ್ದರು.