Districts

ಮಂಡ್ಯದಲ್ಲಿ ಕಾವೇರಿಗಾಗಿ ರೈತರ ಹೋರಾಟ; ಪೊಲೀಸರೊಂದಿಗೆ ಮಾತಿನ ಚಕಮಕಿ

ಮಂಡ್ಯ; ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಇಂದು ಮಂಡ್ಯದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ. ಮಂಡ್ಯದ ಇಂಡವಾಳು ಸಮೀಪ ಸಾವಿರಾರು ರೈತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ನಡೆದಿದೆ.

ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಕೆಲಕಾಲ ಉದ್ವಿಘ್ನ ಸ್ಥಿತಿ ಏರ್ಪಟ್ಟಿತ್ತು. ಪೊಲೀಸರು ಪ್ರತಿಭಟನಾ ನಿರತ ಪ್ರಮುಖರನ್ನು ವಶಕ್ಕೆ ತೆಗೆದುಕೊಂಡರು. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರತಿಭಟನಾಕಾರರನ್ನು ಸ್ಥಳಾಂತರಿಸಲಾಯಿತು.

ಹಲವು ದಿನಗಳಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದೆ. ಕೆಲ ದಿನಗಳಿಂದ ಕಾವೇರಿ ಪಾತ್ರದಲ್ಲಿ ಮಳೆಯೇ ಆಗುತ್ತಿಲ್ಲ. ಹೀಗಿದ್ದರೂ ಕೂಡಾ ತಮಿಳುನಾಡಿಗೆ ನೀರು ಬಿಡಲಾಗಿದೆ. ಇದರಿಂದ ರಾಜ್ಯದ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದು, ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕೆಂದು ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ.

 

Share Post