ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್; ನಾಳೆ ಸಿಎಂ ದೆಹಲಿಗೆ ಪ್ರಯಾಣ
ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಕೊರೋನಾ ಹಾವಳಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲಿ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಲು ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುದ್ದಿಗಾರರ ಜೊತೆ ಮಾತನಾಡಿದರು. ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರದ ಅಭಿಪ್ರಾಯ ಪಡೆಯುತ್ತೇವೆ. ಕೇಂದ್ರ ಒಪ್ಪಿಗೆ ಕೊಟ್ಟರೆ ಬೂಸ್ಟರ್ ಡೋಸ್ ನೀಡುವ ಪ್ರಕ್ರಿಯೆ ನಡೆಯುತ್ತದೆ ಎಂದು ಹೇಳಿದರು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ರಾಜ್ಯ ಕಾರ್ಯಪಡೆಯ ಸಭೆಯಲ್ಲಿ ಕನಿಷ್ಠ ಆರೋಗ್ಯ ಕಾರ್ಯಕರ್ತರಿಗಾದರೂ ಬೂಸ್ಟರ್ ಡೋಸ್ ನೀಡಬೇಕು ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಲು ನಾಳೆ ದೆಹಲಿ ತೆರಳುತ್ತಿದ್ದಾರೆ.