ನಾನು ಬಿಜೆಪಿಗೆ ಹೋಗದಿದ್ದಕ್ಕೆ ಜೈಲಿಗೆ ಕಳುಹಿಸಿದರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಳಗಾವಿ: ನಾನು ಬಿಜೆಪಿ ಪಕ್ಷಕ್ಕೆ ಸೇರದೇ ಇದ್ದುದಕ್ಕೆ ನನ್ನನ್ನು ಜೈಲಿಗೆ ಹಾಕಿಸಿದರು ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರಯ, ಬಿಜೆಪಿಗೆ ನಾನು ಬೆಂಬಲ ಕೊಡಲಿಲ್ಲ. ಜೊತೆಗೆ ಬಿಜೆಪಿ ಜೊತೆ ನಾನು ಹೋಗಲಿಲ್ಲ. ಈ ಕಾರಣಕ್ಕಾಗಿಯೇ ನನ್ನನ್ನು ಜೈಲಿಗೆ ಕಳುಹಿಸಲಾಯಿತು ಎಂದರು.
ಯಡಿಯೂರಪ್ಪ ಅವರು ಮಂಡ್ಯದಲ್ಲಿ ಕಾಂಗ್ರೆಸ್ ಉಸಿರು ನಿಲ್ಲಲಿದೆ ಎಂದು ಹೇಳಿದ್ದಾರೆ. ಪಾಪ ಅವರಿಗಾದ ನೋವಿನಿಂದ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿಯವರ ಬಗ್ಗೆ ಮಾತನಾಡುವುದಕ್ಕೆ ಆಗುವುದಿಲ್ಲ. ಹೀಗಾಗಿ ಬಿಜೆಪಿ ನಾಯಕರ ಮೇಲಿನ ಕೋಪ ತಾಪ ಕಾಂಗ್ರೆಸ್ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯ ಬಿಜೆಪಿ ಸರ್ಕಾರವನ್ನು ಅವರ ಪಕ್ಷದವರೇ ಅಸ್ಥಿರಗೊಳಿಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷದವರಿಗೇ ರಾಜ್ಯದ ಪಕ್ಷದವರನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಆಗುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು. ಎಲ್ಲ ಪಕ್ಷಗಳಲ್ಲೂ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಟ್ಟಿದ್ದಾರೆ. ಅದೇ ರೀತಿ ಕಾಂಗ್ರೆಸ್‌ನಲ್ಲೂ ಕೊಡಲಾಗಿದೆ ಎಂದು ಪತ್ರಕರ್ತರು ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು.