7ನೇ ವೇತನ ಆಯೋಗ ಶಿಫಾರಸು ಜಾರಿಗೆ ಸರ್ಕಾರ ತೀರ್ಮಾನ
ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಲಾಗಿದೆ. ಈ ಮೂಲಕ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಹತ್ತಿರವಾಗಿದೆ.
ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಶೇ.25ರಷ್ಟು ಹೆಚ್ಚಳಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ ಸಿಎಂಗೆ ನೀಡಿದೆ. ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.