ಸುವರ್ಣಸೌಧದ ಬಳಿ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ: ನೂಕುನುಗ್ಗಲು
ಬೆಳಗಾವಿ: ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೆಳಗಾವಿ ಸುವರ್ಣಸೌಧದ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಪ್ರಮುಖ ಕೈ ಮುಖಂಡರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ಗಳನ್ನು ಕಿತ್ತೊಗೆದು ಸುವರ್ಣಸೌಧದ ಪ್ರವೇಶಕ್ಕೆ ಕಾಂಗ್ರೆಸ್ನವರು ಮುಂದಾಗಿದ್ದಾರೆ. ʻಒಳಗೆ ಬಿಡದಿದ್ದರೆ ನಾವು ಇಲ್ಲೇ ಮಲಗುತ್ತೇವೆʼ, ನಮ್ಮ ಪ್ರತಿಭಟನೆ ಹತ್ತಿಕ್ಕಲು ಬಿಜೆಪಿ ಮುಂದಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಬೆಳಗಾವಿ ಸುವರ್ಣಸೌಧದ ಮುಂದೆ ದೊಡ್ಡ ಹೈಡ್ರಾಮಾ ಶುರುವಾಗಿದೆ. ಬ್ಯಾರಿಕೇಡ್ಗಳ ಕುಟ್ಟಿ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಸ್ತೆಗೆ ಅಡ್ಡಲಾಗಿ ಮಲಗಿ ಕಾಂಗ್ರೆಸ್ ಮುಖಂಡರು ಧರಣಿ ನಡೆಸುತ್ತಿದ್ದಾರೆ. ಬಿಜೆಪಿಯವರಿಗೆ ಮನಸ್ಸು, ಹೃದಯ, ಕಣ್ಣು, ಕಿವಿ ಏನೂ ಇಲ್ಲ. 2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಭಯ ಶುರುವಾಗಿದೆ ಅಂತ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುಡುಗಿದ್ದಾರೆ.