ಈ ಲಕ್ಷಣ ಇದ್ದರೆ ಕೊರೊನಾ ಟೆಸ್ಟ್ ಕಡ್ಡಾಯ; ರಾಜ್ಯಗಳಿಗೆ ಕೇಂದ್ರ ಸೂಚನೆ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕೊರೊನಾ ಮೂರನೆ ಅಲೆ ಶುರುವಾಗಿದ್ದು, ಇನ್ನೊಂದು ತಿಂಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಟ್ಟಿನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಸಣ್ಣ ಪ್ರಮಾಣದ ಕೊರೊನಾ ಲಕ್ಷಣ ಕಂಡುಬಂದರೂ ಅಂತಹವರಿಗೆ ಕೊವಿಡ್ ಟೆಸ್ಟ್ ಮಾಡಿಸಬೇಕೆಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಜ್ವರ, ತಲೆನೋವು, ಗಂಟಲು ಕೆರೆತ, ಉಸಿರಾಟದ ಸಮಸ್ಯೆ, ಮೈ ಕೈ ನೋವು, ರುಚಿ ಹಾಗೂ ವಾಸನೆ ಕಳೆದುಕೊಳ್ಳುವುದು, ಆಯಾಸ ಮುಂತಾದ ಲಕ್ಷಣ ಕಂಡುಬಂದರೆ ಕೂಡಲೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಜನರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಒಂದು ಕಡೆ ಕೊವಿಡ್ ಸೋಂಕಿತರು ಹೆಚ್ಚುತ್ತಿದ್ದಾರೆ. ಇನ್ನೊಂದೆಡೆ ಒಮಿಕ್ರಾನ್ ಸೋಂಕಿತರೂ ಜಾಸ್ತಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಬಾರದು. ಮೊದಲೇ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಆರೋಗ್ಯದಲ್ಲಿ ಸಣ್ಣ ಸಮಸ್ಯೆ ಕಾಣಿಸಿಕೊಂಡರೂ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಆಗ ಬಹುಬೇಗ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.