BengaluruPolitics

ಜನವರಿ 14ರ ನಂತರ ನಿಗಮ-ಮಂಡಳಿ ಅಧ್ಯಕ್ಷರ ಫಸ್ಟ್‌ ಲಿಸ್ಟ್‌ ರಿಲೀಸ್‌; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಸಮಪರ್ಕವಾಗಿ ಜನರಿಗೆ ತಲುಪಿಸುವುದು, ಅವುಗಳನ್ನು ಸೂಕ್ತ ರೀತಿಯಲ್ಲಿ ಪ್ರಚಾರ ಮಾಡುವ ಮೂಲಕ ಲೋಕಸಭೆಯಲ್ಲಿ ಹೆಚ್ಚಿನ ಮತಗಳನ್ನು ಹಾಗೂ ಸ್ಥಾನಗಳನ್ನು ಗೆಲ್ಲುವತ್ತ ಗಮನ ಹರಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇದರಲ್ಲಿ ಗ್ಯಾರೆಂಟಿಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಮಿತಿಗಳ ರಚನೆ ಮಾಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎ ಡಿ.ಕೆ.ಶಿವಕುಮಾರ್‌, ನಮ್ಮ ಸರ್ಕಾರದ ಗ್ಯಾರೆಂಟಿಗಳು ಸುಮಾರು 3.5 ಕೋಟಿ ಜನರನ್ನು ತಲುಪಿವೆ. ಅವುಗಳಲ್ಲಿ ಲೋಪ ಬರದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ತರಲು ಸಮಿತಿಗಳನ್ನು ರಚನೆ ಮಾಡುತ್ತೇವೆ ಎಂದು ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 25 ಸಚಿವರಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ. ಕಾರ್ಯಕ್ರಮಗಳನ್ನು ರೂಪಿಸಲು ಅವರಿಗೆ ತಿಳಿಸಿದ್ದೇವೆ ಎಂದು ಹೇಳಿದರು. ಆಕ್ಷನ್ ಕಮಿಟಿ, ಆರೋಗ್ಯ ಕಮಿಟಿ ರಚನೆ ಮಾಡ್ತೇವೆ. ಕೆರೆಗಳ ಅಭಿವೃದ್ಧಿಗೆ ಸಮಿತಿ ಮಾಡ್ತೇವೆ ಎಂದೂ ಡಿ.ಕೆ.ಶಿವಕುಮಾರ್‌ ಹೇಳಿದರು. ತಿಂಗಳೊಳಗೆ ಈ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ಈ ಜವಾಬ್ದಾರಿಯನ್ನು ಸಚಿವರು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಇನ್ನು ರಾಜ್ಯ ಮಟ್ಟದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನ ಮಾಡಲಾಗಿದ್ದು, ಎಲ್ಲಿ ಮಾಡಬೇಕು ಎಂಬುದರ ಬಗ್ಗೆ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಈಗಾಗಲೇ ನಾವು ನಾಲ್ಕು ಗ್ಯಾರೆಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ಐದನೇ ಗ್ಯಾರೆಂಟಿ ಯುವನಿಧಿ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುತ್ತದೆ. ಜನವರಿ 21ರಂದು ಈ ಸಮಾವೇಶ ಆಯೋಜಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದರು.

ನಿಗಮ ಮಂಡಳಿ ಅಧ್ಯಕ್ಷರ ನೇಮಕದ ಬಗ್ಗೆಯೂ ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಫಸ್ಟ್‌ ಲಿಸ್ಟ್‌ ರೆಡಿಯಾಗಿದೆ. ಜನವರಿ 14ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಎರಡು ವರ್ಷಗಳ ಅವಧಿಗೆ ನಿಗಮ ಮಂಡಳಿಗೆ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಮಾಡುತ್ತೇವೆ. ಅನಂತರ ಬೇರೆಯವರಿಗೆ ಅವಕಾಶ ನೀಡಲಾಗುತ್ತದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್‌ ಹೇಳಿದರು.

ಇನ್ನು ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾವು ನುಡಿದಂತೆ ನಡೆದಿದ್ದೇವೆ. ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದಾರೆ. ಅವುಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕಿದೆ. ಅದಕ್ಕಾಗಿ ಸಮಿತಿಗಳನ್ನು ರಚನೆ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿ ರಚನೆ ಮಾಡಲಾಗಿದೆ. KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆ ಸಂಬಂಧ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ. ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ಫಿಕ್ಸ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಷಿಕ 16 ಕೋಟಿ ರೂ. ವೆಚ್ಚವಾಗಲಿದೆ. ಈ ಸಮಿತಿ ರಚನೆಯೊಂದಿಗೆ ಕಾಂಗ್ರೆಸ್​, ಗ್ಯಾರಂಟಿಗಳನ್ನೇ ಟ್ರಂಪ್ ಕಾರ್ಡ್​ ಮಾಡಿಕೊಂಡು ಲೋಕಸಭೆ ಚುನಾವಣೆ ಹೋಗುವುದಂತೂ ಸ್ಪಷ್ಟವಾಗಿದೆ.

Share Post