ರಾಹುಲ್ ಶಕ್ತಿ ಕುಂದಿಸುವ ಪ್ರಯತ್ನ; ಕಾಂಗ್ರೆಸ್‌ನಿಂದ ಜುಲೈ 12ಕ್ಕೆ ಮೌನ ಪ್ರತಿಭಟನೆ – ಡಿ.ಕೆ.ಶಿವಕುಮಾರ್
ಬೆಂಗಳೂರು; ರಾಜಕೀಯ ಕುತಂತ್ರದ ಮೂಲಕ ರಾಹುಲ್ ಗಾಂಧಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಯತ್ನ ನಡೆಯುತ್ತಿದ್ದು, ಇದರ ವಿರುದ್ಧ ದೇಶಾದ್ಯಂತ ಮೌನಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ಷಡ್ಯಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಾನು ಕಾನೂನು ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ಆದ್ರೆ ರಾಹುಲ್ ಗಾಂಧಿಯವರು ಯಾವ ಕಾರಣಕ್ಕೂ ಈ ದೇಶದ ಸ್ವಾಭಿಮಾನಕ್ಕೆ ದಕ್ಕೆ ತಂದಿಲ್ಲ. ಆದ್ರೂ ಅವರ ವಿರುದ್ಧ ಜಕೀಯವಾಗಿ ಷಡ್ಯಂತರ ನಡೆಯುತ್ತಿದೆ. ಹೀಗಾಗಿ ನಾವು ದೇಶದ ಎಲ್ಲಾ ರಾಜ್ಯಗಳ ರಾಜಧಾನಿ ಕೇಂದ್ರಗಳಲ್ಲಿ ಮೌನ ಪ್ರತಿಭಟನೆ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ. ಜುಲೈ 12ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಎಲ್ಲರೂ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಧರಣಿ ನಡೆಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಈ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್‌ನ ಎಲ್ಲಾ ಶಾಸಕರು, ಸಚಿವರು, ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಸಿಎಂ ಸಿದ್ದರಾಮಯ್ಯ ಕೂಡಾ ಪಾಲ್ಗೊಳ್ಳಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಿದ್ದರಿಂದ ಕಾಂಗ್ರೆಸ್‌ಗೆ ಶಕ್ತಿ ಬಂತು. ಅವರು ಎಲ್ಲೆಲ್ಲೆ ಪಾದಯಾತ್ರೆ ನಡೆಸಿದರೋ ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಗೆಲ್ಲೋಕೆ ಕಷ್ಟ ಇರುವ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಜಯ ಸಿಕ್ಕಿದೆ. ಇದೇ ಕಾರಣಕ್ಕೆ ಶಕ್ತಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಅದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ರಣದೀಪ್ ಸುರ್ಜೇವಾಲಾ ಅವರು ಕೂಡಾ ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.