ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ; ಪರಿಷತ್ ಟಿಕೆಟ್ ಫಿಕ್ಸ್
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದ ಜೆಡಿಎಸ್ ಹಿರಿಯ ನಾಯಕ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಂದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ ಅವರು, ಅವರ ಸಮ್ಮುಖದಲ್ಲೇ ಪಕ್ಷಕ್ಕೆ ಸೇರ್ಪಡೆಯಾದರು. ಅಮಿತ್ ಷಾ ರಾಜ್ಯಕ್ಕೆ ಆಗಮಿಸಿದ್ದು, ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೋಟೆಲ್ನಲ್ಲಿ ಅಮಿತ್ ಶಾರನ್ನು ಭೇಟಿಯಾದ ಹೊರಟ್ಟಿ, ಬಿಜೆಪಿ ಪಕ್ಷಕ್ಕೆ ಸೇರಿದರು.
ಈ ಹಿಂದೆ ಮೌಖಿಕ ಸಮ್ಮತಿ ನೀಡಿದ್ದ ಶಾ ಇಂದು ಅಧಿಕೃತ ಸಮ್ಮತಿ ನೀಡಿ ಪಕ್ಷ ಸೇರ್ಪಡೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಜರಿದ್ದರು. ಇದೇ ವೇಳೆ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹೊರಟ್ಟಿ ಸ್ಪರ್ಧಿಸುವ ಕುರಿತು ಸಮಾಲೋಚನೆ ನಡೆಸಿದರು. ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರರ ಕ್ಷೇತ್ರಗಳು ತೆರವಾಗಲಿದ್ದು, ಭಾರತೀಯ ಜನತಾ ಪಕ್ಷ ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದರೂ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಕ್ಷೇತ್ರಕ್ಕೆ ಮಾತ್ರ ಇನ್ನೂ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ.