ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಬೆಂಗಳೂರು; 2021ರಲ್ಲಿ ನಡೆದ ಬಾಂಗ್ಲಾದೇಶದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ ಬಂಧಿತರಾಗಿರುವ 9 ಜನ ಅಪರಾಧಿಗಳಿಗೆ 54ನೇ ಸಿಸಿಹೆಚ್ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು, 7 ಅಪರಾಧಿಗಳಿಗೆ ಜೀವಾವಧಿ, ಮತ್ತೊಬ್ಬ ಅಪರಾಧಿ ತಾನ್ಯಾಗೆ 20 ವರ್ಷ ಜೈಲು ಹಾಗೂ ಜಮಾಲ್ ಎಂಬಾತನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎನ್. ಸುಬ್ರಹ್ಮಣ್ಯ ಅವರು ಈ ಆದೇಶ ಹೊರಡಿಸಿದ್ದಾರೆ. 2021ರ ಮೇ 27ರಂದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕನಕನಗರದ ಬಾಡಿಗೆ ಮನೆಯಲ್ಲಿ ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು 10 ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಬಯಲಾಗಿತ್ತು.