BengaluruPolitics

ಸಚಿವ ಅಶ್ವತ್ಥನಾರಾಯಣ್‌ ಜೊತೆ ಜಗಳ; ಡಿ.ಕೆ.ಸುರೇಶ್‌ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ರಾಮನಗರದಲ್ಲಿ ನಡೆದ ಅಂಬೇಡ್ಕರ್‌ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಸಂಸದ ಡಿ.ಕೆ.ಸುರೇಶ್‌ ಅವರು ಸಚಿವ ಅಶ್ವತ್ಥನಾರಾಯಣ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಬೆಂಗಳೂರು, ರಾಮನಗರ, ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಮನಗರದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್‌ ಹಾಗೂ ಡಿ.ಕೆ.ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿದರು. ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಬೆಂಗಳೂರಿನ ಮಲ್ಲೇಶ್ವರಂನಲ್ಲೂ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್‌ ವಿರುದ್ಧ ಪ್ರತಿಭಟನೆ ನಡೆಸಿದರು.

ರಾಮನಗರದಲ್ಲಿ ನಿನ್ನೆ ಅಂಬೇಡ್ಕರ್‌ ಹಾಗೂ ಕೇಂಪೇಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು. ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಅವರ ಭಾಷಣದ ಮೇಲೆ ಡಿ.ಕೆ.ಸುರೇಶ್‌ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆಯಲ್ಲೇ ಇಬ್ಬರು ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕೂಡಾ ಅಶ್ವತ್ಥನಾರಾಯಣ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಆದ್ರೆ ಬಿಜೆಪಿ ಇದು ಡಿ.ಕೆ. ಬ್ರದ್ರರ್ಸ್‌ ಗೂಂಡಾಗಿರಿ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಮಹನೀಯರನ್ನು ನೆನೆಯುವ ಕಾರ್ಯಕ್ರಮದಲ್ಲಿ ಡಿ.ಕೆ.ಸುರೇಶ್‌ ದಬ್ಬಾಳಿಕೆ ನಡೆಸಿದ್ದಾರೆ. ಸಿಎಂ ಎದುರೇ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Share Post