ಅಕ್ಕಿ ಕೊಡಲ್ಲ ಎಂದ ಕೇಂದ್ರ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಮೀಟಿಂಗ್
ಬೆಂಗಳೂರು; ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ತಲಾ ಹತ್ತು ಕೆಜಿ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದೆ. ಆದ್ರೆ ಹಣ ನೀಡುತ್ತೇವೆಂದರೂ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡೋದಿಲ್ಲ ಎಂದು ಹೇಳುತ್ತಿದೆ. ನಿನ್ನೆ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿಯಾಗಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದರು. ಆದ್ರೆ, ಪಿಯೂಷ್ ಗೋಯೆಲ್ ಅವರು ನೇರವಾಗಿಯೇ ಅಕ್ಕಿ ನೀಡೋದಿಲ್ಲ ಎಂದು ಹೇಳಿಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ತಲೆನೋವು ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಸಭೆ ಕರೆದಿದ್ದಾರೆ. ಮಧ್ಯಾಹ್ನ 3.30ಕ್ಕೆ ವಿಧಾನಸೌಧದಲ್ಲಿ ಈ ಸಭೆ ನಡೆಯಲಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಆಹಾರ ಇಲಾಖೆಯ ಹಿಇರಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವುದರಿಂದ ಪರ್ಯಾಯ ವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಚರ್ಚೆ ಮಾಡಲಿದ್ದಾರೆ. ಛತ್ತಿಸ್ ಗಢ ಹಾಗೂ ಪಂಜಾಬ್‌ನಿಂದ ಅಕ್ಕಿಯನ್ನು ತರಿಸಿಕೊಂಡು ಬಡವರಿಗೆ ಅಕ್ಕಿ ನೀಡುವ ಸಂಬಂಧ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.