ಮಳೆಹಾನಿ ಹಿನ್ನೆಲೆ; ಅಧಿಕಾರಿಗಳ ಜೊತೆ ಸಿಎಂ ಸಭೆ
ಬೆಂಗಳೂರು; ರಾಜ್ಯದಲ್ಲಿ ಮತ್ತೆ ಮಳೆ ಅವಾಂತರ ಸೃಷ್ಟಿಸಿದ್ದು, ಈ ಬಗ್ಗೆ ಸಿಎಂ ಬೊಮ್ಮಾಯಿಯವರು ಮಳೆಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಕೂಡಲೇ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿಯವರು ಜಿಲ್ಲಾ ಪ್ರವಾಸದಲ್ಲಿದ್ದಾರೆ. ಇಂದು ಹೊಸಪೇಟೆಯಲ್ಲಿದ್ದು, ಅಲ್ಲಿಂದಲೇ ವಿಡೊಯೋ ಕಾನ್ಫರೆನ್ಸ್ ಮೂಲಕ ೧೩ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಜೊತೆ ಮಾತುಕತೆ ನಡೆಸಿದರು. ಜಿಲ್ಲಾ ಎಸ್‌ಪಿಗಳು ಕೂಡಾ ಭಾಗಿಯಾಗಿದ್ದರು. ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಹಾಗೂ ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಸಭೆಯಲ್ಲಿ ಭಾಗಿಯಾಗಿದ್ದರು.
ಬೆಳಗಾವಿ, ಧಾರವಾಡ, ದಾವಣಗೆರೆ, ಗದಗ, ಕಲ್ಬುರ್ಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬೀದರ್, ಮೈಸೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಸಾಕಷ್ಟು ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ.