Bengaluru

ನಾಳೆಯಿಂದ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ; 10 ದಿನಗಳ ಕಾಲ ರಾಜ್ಯಪ್ರವಾಸ

ಬೆಂಗಳೂರು; ಕೆಲದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಮನೆಗಳು, ಕಟ್ಟಡಗಳು ಕುಸಿದಿವೆ. ಕೆಲವು ಗ್ರಾಮಗಳು ನಡುಗಡ್ಡೆಗಳಾಗಿವೆ. ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲು ತೀರ್ಮಾನಿಸಿದ್ದಾರೆ. ನಾಳೆಯಿಂದ ಹತ್ತು ದಿನಗಳ ಕಾಲ ಸಿಎಂ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ, ಜನರ ಸಮಸ್ಯೆ ಆಲಿಸಲಿದ್ದಾರೆ.

     ತೀವ್ರ ಹಾನಿಗೊಳಾಗಿರುವ ನಾಲ್ಕು ಜಿಲ್ಲೆಗಳಿಗೆ ನಾಳೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ವಿತರಣೆಗೆ ನಿರ್ದೇಶನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಮಳೆಯಿಂದ ಸಾಕಷ್ಟು ಜಿಲ್ಲೆಗಳಲ್ಲಿ ಭೂಕುಸಿತ, ಮನೆಗಳಿಗೆ ಹಾನಿ ಸೇರಿದಂತೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿದೆ. ಹೀಗಾಗಿ ಮಳೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

   ನಾಳೆ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಬುಧವಾರ ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪರಿಶೀಲನೆ ನಡೆಸಲಿದಾರೆ.

Share Post