ಕನ್ಹಯ್ಯಾ ಲಾಲ್ ಕೊಲೆ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ; ಸಿಎಂ ಬೊಮ್ಮಾಯಿ
ಬೆಂಗಳೂರು; ಉದಯ್ಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಶಿರಚ್ಛೇದ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರವಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನ ಆರ್.ಟಿ ನಗರದ ತಮ್ಮ ಖಾಸಗಿ ನಿವಾಸದಲ್ಲಿ ಮಾತನಾಡಿದ ಅವರು, ಉದಯ್ಪುರದಲ್ಲಿ ನಡೆದಿರುವ ಪ್ರಕರಣ ಭಯೋತ್ಪಾದಕರ ಚಟುವಟಿಕೆಯಾಗಿದ್ದು, ಅದರ ಹಿಂದೆ ಬಹಳ ದೊಡ್ಡ ಅಂತಾರಾಷ್ಟ್ರೀಯ ಷಡ್ಯಂತ್ರವಿದೆ ಎಂದಿದ್ದಾರೆ.
ಈ ಪ್ರಕರಣದ ಬಗ್ಗೆ ತನಿಖೆಯಾಗಬೇಕು ಮತ್ತು ಕೃತ್ಯದಲ್ಲಿ ಭಾಗಿಯಾದವರನ್ನು ಗಲ್ಲಿಗೇರಿಸಬೇಕು ಎಂದು ಹೇಳುವ ಮೂಲಕ ಸಿಎಂ ಆಕ್ರೋಶ ವ್ಯಕ್ತಪಡಿಸಿದರು. ಉದಯ್ಪುರ ಘಟನೆ ಕುರಿತು ರಾಜಸ್ಥಾನ ಸರ್ಕಾರ ಕೂಡಲೇ ಎಲ್ಲ ರೀತಿಯ ಕ್ರಮಗಳನ್ನು ಜರುಗಿಸಬೇಕು. ಅದರ ಸಂಪೂರ್ಣ ತನಿಖೆ ಮಾಡಬೇಕು. ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಹಂತಕರ ಹಿಂದೆ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆಗಳು ಎಲ್ಲವೂ ಇವೆ. ಹೀಗಾಗಿ ಸಮಗ್ರ ತನಿಖೆಯ ಅಗತ್ಯವಿದೆ ಎಂದರು.