ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಸಂಜೆ ಸಿಎಂ ನೇತೃತ್ವದಲ್ಲಿ ತುರ್ತು ಸಭೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ಉಲ್ಭಣವಾಗುತ್ತಿದೆ. ಅದರಲ್ಲೂ ಧಾರವಾಡ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಕೊರೋನಾ ಪಾಸಿವಿಟಿ ಸಂಖ್ಯೆ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.
ಇಂದು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕೇರಳ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಕೆಲವು ರಾಷ್ಟ್ರಗಳಲ್ಲಿ ಕೊರೋನಾ ಹೊಸ ತಳಿಗಳು ಸೃಷ್ಟಿಯಾಗುತ್ತಿವೆ. ಹೀಗಾಗಿ, ಮುಂದೆ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸಂಜೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.
ಆರೋಗ್ಯ ಇಲಾಖೆ, ವಿಪತ್ತು ನಿರ್ವಹಣಾ ಇಲಾಖೆಗಳ ಅಧಿಕಾರಿಗಳು, ಕೋವಿಡ್ ಸಲಹಾ ಸಮಿತಿ ಸದಸ್ಯರು, ತಾಂತ್ರಿಕ ಸಲಹಾ ಸಮಿತಿ ತಜ್ಞರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಕೊರೋನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.