ಸಿ.ಎಂ.ಇಬ್ರಾಹಿಂ ಭೇಟಿಯಾದ ಮಾಜಿ ಸಚಿವ ರೋಶನ್ ಬೇಗ್
ಬೆಂಗಳೂರು: ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷ ಬಿಡುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ಎಸ್.ಆರ್.ಪಾಟೀಲ್ ಅವರು ಇಬ್ರಾಹಿಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರ ನಡುವೆಯೇ ಮಾಜಿ ಸಚಿವ ಹಾಗೂ ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ರೋಶನ್ ಬೇಗ್ ಅವರು ಇಂದು ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿಯಾಗಿದ್ದಾರೆ. ಉಭಯ ನಾಯಕರು ಹಲವು ನಿಮಿಷಗಳ ಕಾಲ ಮುಂದಿನ ರಾಜಕೀಯ ಜೀವನದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೋಶನ್ ಬೇಗ್ ಅವರು ಇಬ್ರಾಹಿಂ ಭೇಟಿ ಮಾಡಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಒಂದು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಬೇರೆ ಬೇರೆ ಪಕ್ಷಗಳಲ್ಲಿನ ನಾಯಕರಿಗೆ ಗಾಳ ಹಾಕುತ್ತಿದ್ದಾರೆ. ಇದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಸೈಲೆಂಟಾಗಿ ತಮ್ಮ ಕಾರ್ಯಾಚರಣೆ ಶುರು ಮಾಡಿದಂತೆ ಕಾಣುತ್ತಿದೆ.