ಲಸಿಕೆಯ ವೇಗ ಹೆಚ್ಚಿಸಬೇಕು; ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತಾಕೀತು
ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನ ಚುರುಕುಗೊಳಿಸಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳು ತಾಕೀತು ಮಾಡಿದ್ದಾರೆ. ಡಿಸೆಂಬರ್ ಒಳಗೆ ೨ನೇ ಡೋಸ್ ಲಸಿಕೆ ಪೂರ್ತಿಗೊಳಿಸಬೇಕು. ಲಸಿಕೆ ಹಾಕಿಸಿಕೊಳ್ಳದವರನ್ನು ಗುರುತಿಸಿ, ಅವರಿಗೆ ಲಸಿಕೆ ನೀಡುವ ಕೆಲಸ ಮಾಡಬೇಕೆಂದು ಸಿಎಂ ಬೊಮ್ಮಾಯಿ ಸೂಚನೆ ನೀಡಿದರು.
ವಿದೇಶಗಳಲ್ಲಿ ಹೊಸ ತಳಿಯ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಜೊತೆಗೆ ಬೆಂಗಳೂರು, ಧಾರವಾಡದಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಕೇರಳ, ಮಹಾರಾಷ್ಟ್ರದಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯಕ್ಕೆ ಆಗಮಿಸುವ ಹೊರರಾಜ್ಯಗಳ ಜನರಿಗೆ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಬೇಕು. ಜೊತೆಗೆ ವಿದೇಶಗಳಿಂದ ಬರುವವರಿಗೂ ಕಡ್ಡಾಯವಾಗಿ ಟೆಸ್ಟ್ ಮಾಡಿಸಬೇಕೆಂದು ಸಿಎಂ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ತೀರ್ಮಾನಗಳು:
೧. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.
೨. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
೩. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ
೪. ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯಬೇಕು
೫. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
೬. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು
೭. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
೮. ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
೯. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
೧೦. ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
೧೧. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
೧೨. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.