ನಾಳೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ; ದೆಹಲಿಯತ್ತ ಡಿಕೆಶಿ, ಸಿದ್ದರಾಮಯ್ಯ
ಬೆಂಗಳೂರು; ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ನಾಳೆ ಈ ಬಗ್ಗೆ ಅಂತಿಮ ಹಂತದ ಸಭೆ ನಡೆಯುತ್ತಿದೆ. ಈಗಾಗಲೇ ರಾಜ್ಯದಿಂದ ಹೈಕಮಾಂಡ್‌ಗೆ ಪಟ್ಟಿ ರವಾನಿಸಲಾಗಿದ್ದು, ನಾಳೆ ನಡೆಯುವ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.
ನಾಳೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಇಂದು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಹೊರಟಿದ್ದಾರೆ. ನಾಳೆಯ ಸಭೆಯಲ್ಲಿ ಇಬ್ಬರೂ ನಾಯಕರು ಪಾಲ್ಗೊಳ್ಳಲಿದ್ದಾರೆ. ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರು ಹಾಗೂ ಒಂದೇ ಪ್ರಮುಖ ಆಕಾಂಕ್ಷಿ ಇದ್ದ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದ್ರೆ ಉಳಿದ ನೂರು ಕ್ಷೇತ್ರಗಳಲ್ಲಿ ಎರಡಕ್ಕಿಂತ ಹೆಚ್ಚು ಆಕಾಂಕ್ಷಿಗಳು ಪ್ರಬಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡನೇ ಪಟ್ಟಿ ತಯಾರಿ ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿದೆ.
ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಐವತ್ತಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಂತಿಮ ಮುದ್ರೆ ಬೀಳುತ್ತೆ ಎಂದು ಹೇಳಲಾಗುತ್ತಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆದಿದ್ದು, ಬಂಡಾಯವೇಳದಂತೆ ಅತೃಪ್ತಿಯನ್ನು ಶಮನ ಮಾಡಿ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳಿನ ಸಭೆ ಮಹತ್ವ ಪಡೆದುಕೊಂಡಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವರುಣಾ ಜೊತೆಗೆ ಕೋಲಾರ ಕ್ಷೇತ್ರವನ್ನೂ ಕೇಳಿದ್ದಾರೆ. ಇತ್ತ ಮಾಜಿ ಡಿಸಿಎಂ ಪರಮೇಶ್ವರ್ ಅವರು ಕೊರಟಗೆರೆಯ ಜೊತೆ ಪುಲಿಕೇಶಿ ನಗರ ಕ್ಷೇತ್ರವನ್ನು ಕೇಳಿದ್ದಾರಂತೆ. ನಾಳೆ ನಡೆಯುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಬಹುದು. ಈ ಮೊದಲು ಒಬ್ಬರಿಗೆ ಒಂದೇ ಕ್ಷೇತ್ರ ಎಂದು ಹೇಳಲಾಗುತ್ತಿತ್ತು. ಆದ್ರೆ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ. ಇದರ ಬೆನ್ನಲ್ಲೇ ಪರಮೇಶ್ವರ್ ಅವರು ಕೂಡಾ ಎರಡು ಕ್ಷೇತ್ರ ಕೇಳಿದ್ದಾರೆ. ಹೀಗಾಗಿ, ಕೇಂದ್ರ ಚುನಾವಣಾ ಸಮಿತಿ ಯಾವ ನಿರ್ಧಾರ ಕೈಗೊಳ್ಳುತ್ತೆ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.