BengaluruPolitics

ಕಾರ್ಯಕರ್ತನಾಗಿ ದುಡಿಯುತ್ತೇನೆ, ಎಲ್ಲಾ ತ್ಯಾಗಕ್ಕೂ ಸಿದ್ಧ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಇದು ನಿಮ್ಮ ಪಕ್ಷ. ನಾನು ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಲು, ಎಲ್ಲಾ ರೀತಿಯ ತ್ಯಾಗಕ್ಕೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದ ನವ ಸಂಕಲ್ಪ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ನನ್ನಿಂದ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ. ತಪ್ಪು ತಿದ್ದಿಕೊಂಡು, ನಿಮ್ಮ ಜತೆ ದುಡಿಯಲು ಬದ್ಧನಿದ್ದೇನೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ದುಡಿಯುತ್ತೇನೆ. 2023 ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಿಮ್ಮೆಲ್ಲರ ಜವಾಬ್ದಾರಿ ಎಂದು ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಅವರು ಕರೆ ನೀಡಿದರು.

ನಾನು ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡಾಗ, ‘ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು’ ಎಂದು ಹೇಳಿದ್ದೆ. ಈ ಚಿಂತನ ಮಂಥನ ಶಿಬಿರವನ್ನು 7-8 ತಿಂಗಳ ಹಿಂದೆಯೇ ನಡೆಸಲು ಯೋಚಿಸಿದ್ದೆವು. ಉಪಚುನಾವಣೆ, ಹೋರಾಟ, ಅಧಿವೇಶನ, ದೆಹಲಿ ಕಾರ್ಯಕ್ರಮ ಮತ್ತಿತರ ಕಾರಣಗಳಿಂದ ನಾಲ್ಕು ಬಾರಿ ಮುಂದೂಡಲಾಗಿತ್ತು. ಕೊಡಗು, ಹುಬ್ಬಳ್ಳಿ, ಮಂಗಳೂರಿನಲ್ಲಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಎಐಸಿಸಿ ಕೊಟ್ಟಿರುವ ಸೂಚನೆ, ಮಾರ್ಗದರ್ಶನದ ಪ್ರಕಾರ ನಾನು ಈ ಸಭೆ ಮಾಡುತ್ತಿದ್ದೇವೆ. ಅವರ ಸೂಚನೆಯಂತೆ ಆರು ಸಮಿತಿಗಳನ್ನು ರಚಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಯಾವ ದಿಕ್ಕಿನಲ್ಲಿ ಹೋಗಬೇಕು, ಯಾವ ರೀತಿ ಹೋರಾಟ ಮಾಡಬೇಕು ಎಂದು ಉದಯಪುರ ನವಸಂಕಲ್ಪ ಶಿಬಿರದಲ್ಲಿ ತೀರ್ಮಾನ ಮಾಡಲಾಗಿದೆ. ಕಾರ್ಯಾಧ್ಯಕ್ಷರಿದ್ದರೂ ಸಮಿತಿಗಳಿಗೆ ಬೇರೆ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಉದಯಪುರ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಅವಕಾಶ ನೀಡಲಾಗಿದೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 9 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲು ರಾಷ್ಟ್ರ ನಾಯಕರು ಸೂಚಿಸಿದ್ದಾರೆ. ಯುವಕರು, ವಿದ್ಯಾರ್ಥಿಗಳು, ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸರಕಾರದ ವೈಫಲ್ಯಗಳ ವಿರುದ್ಧ ದೊಡ್ಡ ಹೋರಾಟ ಮಾಡಬೇಕಾಗಿದೆ. ನಿಮ್ಮ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಪ್ರಣಾಳಿಕೆ ಮಾಡಬೇಕು. ಕರಾವಳಿ, ಮಲೆನಾಡು, ಬೆಂಗಳೂರು, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಬೇಕು. ಎಲ್ಲಾ ವರ್ಗದ ಜನರ ಸೇವೆಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬೇಕು ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಕರೆ ನೀಡಿದರು.

Share Post