ಸೋನಿಯಾ ವಿಚಾರಣೆಗೆ ವಿರೋಧ; ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು; ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಸೋನಿಯಾಗಾಂಧಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದ್ವೇಷದ ರಾಜಕೀಯ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ವಿಚಾರಣೆ ವೇಳೆಯೂ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಕೂಡಾ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಫ್ರೀಡಂಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಅಲ್ಲಿಂದ ಮೆರವಣಿಗೆ ನಡೆಸಲಿದ್ದಾರೆ. ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಶಾಸಕರು, ಮುಖಂಡರು ಕಡ್ಡಾಯವಾಗಿ ಭಾಗವಹಿಸಬೇಕು ಅಂತ ಕೆಪಿಸಿಸಿ ಸೂಚಿಸಿದೆ. ಹೀಗಾಗಿ ಪ್ರತಿಭಟನೆಯಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಸಾಧ್ಯತೆ ಇದೆ. ಫ್ರೀಡಂಪಾರ್ಕ್ ಸುತ್ತ ಭಾರೀ ಭದ್ರತೆ ನಿಯೋಜಿಸಲಾಗಿದೆ. ಟ್ರಾಫಿಕ್ ಜಾಮ್ ನಿಯಂತ್ರಿಸಲು ಕೂಡ ಸಂಚಾರಿ ಪೊಲೀಸರು ಕೂಡ ಸಜ್ಜಾಗಿದ್ದಾರೆ.