Bengaluru

ಈಶ್ವರಪ್ಪ ವಜಾಗೆ ಆಗ್ರಹಿಸಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಸಮೀಪ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ವಿಧಾನಸೌಧದ ಪೂರ್ವ ಗೇಟ್​​ನ ಬ್ಯಾಂಕ್ವೆಟ್ ಹಾಲ್ ಹೊರೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸೌಧದಲ್ಲಿ ಆಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ. ರಾತ್ರಿ ಇಲ್ಲೇ ಮಲಗುವ ಮೂಲಕ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸುತ್ತೇವೆ. ಅಂಬೇಡ್ಕರ್ ಅನುಯಾಯಿಗಳು ನಾವು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಂತೋಷ್ ಪಾಟೀಲ ಪ್ರಕರಣ ಮುಚ್ಚಿಹಾಕಲು ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಭಾಗವಹಿಸಿದ್ದಾರೆ.

Share Post