BengaluruDistricts

ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಳ: 7 ಜಿಲ್ಲೆಗಳ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು

ಬೆಂಗಳೂರು: ಉತ್ತರ ಕರ್ನಾಟಕದ 7 ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿದ್ದು, ಈ ಜಿಲ್ಲೆಗಳ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಉತ್ತರ ಕರ್ನಾಟಕ ಭಾಗದ ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಏಳು ಜಿಲ್ಲೆಗಳ ಮಕ್ಕಳಿಗೆ ಮಾತ್ರ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಲಾಗುತ್ತದೆ.

ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ ಯೋಜನೆಯಡಿ ಉತ್ತರ ಕರ್ನಾಟಕದ ಏಳು ಜಿಲ್ಲೆಗಳ ಶಾಲಾ ಮಕ್ಕಳಿಗೆ ಮಧ್ಯಾಹ್ನ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಸಮಯದಲ್ಲಿ, ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಆದರೆ ಕಾರಣಾಂತರಗಳಿಂದ ಮೊಟ್ಟೆ ವಿತರಣೆಯನ್ನು ನಿಲ್ಲಿಸಲಾಗಿತ್ತು. ಆದರೆ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚುತ್ತಿದ್ದು, ಹಲವಾರು ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆಯ್ದ ಜಿಲ್ಲೆಗಳ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ನಿರ್ಧರಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಶಾಲೆಗಳು ನಡೆದಿರಲಿಲ್ಲ. ಈ ವರ್ಷವೂ ಕೂಡಾ ಆಗಸ್ಟ್‌ ನಂತರ ಶಾಲೆಗಳು ಆರಂಭವಾಗಿವೆ. ಇದೀಗ ಎಲ್ಲಾ ಕಡೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿವೆ. ಶಾಲೆಗಳಲ್ಲಿ ಬಿಸಿಯೂಟ ವಿತರಣೆ ಕೂಡಾ ನಡೆಯುತ್ತಿದ್ದು, ಇದೀಗ ಬಿಸಿಯೂಟದ ಜೊತೆಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಲಾಗುತ್ತದೆ.

 

Share Post