BengaluruPolitics

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ; ಗರಿಗೆದರಿದ ರಾಜಕೀಯ

ಬೆಂಗಳೂರು; ಮೂರೂ ಪಕ್ಷಗಳಿಂದ ಭಾಗಶಃ ಟಿಕೆಟ್‌ ಘೋಷಣೆಯಾಗಿದೆ. ಈ ನಡುವೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಹೀಗಾಗಿ ಇಂದಿನಿಂದ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಲಿದೆ. ಟಿಕೆಟ್‌ ಘೋಷಣೆಯಾದವರು ಈಗಾಗಲೇ ಬಿ ಫಾರ್ಮ್‌ ಪಡೆದುಕೊಂಡು ನಾಮಪತ್ರ ಸಲ್ಲಿಸೋದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.

ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್ 24 ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.  ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ. ಇಂದು ಚುನಾವಣಾ ಆಯೋಗ ಚುನಾವಣೆಗೆ ಅಧಿಕೃತ ಅಧಿಸೂಚನೆ ಹೊರಡಿಸುತ್ತಿದೆ. ಇದರಲ್ಲಿ ಮತದಾನದ ಸಮಯ ಸೇರಿದಂತೆ ಇತರೆ ಪ್ರಮುಖ ವಿಷಯಗಳನ್ನು ಅಧಿಸೂಚನೆ ಒಳಗೊಂಡಿರುತ್ತದೆ.

ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ.

 

Share Post