ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿಗಳ ರಚನೆ; ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಸಮಪರ್ಕವಾಗಿ ಜನರಿಗೆ ತಲುಪಿಸುವುದು, ಅವುಗಳನ್ನು ಸೂಕ್ತ ರೀತಿಯಲ್ಲಿ ಪ್ರಚಾರ ಮಾಡುವ ಮೂಲಕ ಲೋಕಸಭೆಯಲ್ಲಿ ಹೆಚ್ಚಿನ ಮತಗಳನ್ನು ಹಾಗೂ ಸ್ಥಾನಗಳನ್ನು ಗೆಲ್ಲುವತ್ತ ಗಮನ ಹರಿಸಿದೆ. ಇದೇ ಕಾರಣಕ್ಕಾಗಿಯೇ ಸಿಎಂ ಸಿದ್ದರಾಮಯ್ಯ ಅವರು ಇಂದು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಲಾಗುವುದು ಎಂದಿದ್ದಾರೆ
ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತದೆ. ಉಳಿದ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಗೌರವ ಧನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.
ಇದಕ್ಕಾಗಿ ವರ್ಷಕ್ಕೆ ಅಂದಜಾಉ 16 ಕೋಟಿ ರೂಪಾಯಿ ವೆಚ್ಚವಾಗಲಿದೆ. ಗ್ಯಾರೆಂಟಿ ಯೋಜನೆಗಳ ಸಮಪರ್ಕ ಅನುಷ್ಠಾನಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.