Bengaluru

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ; ಹೆಚ್‌ಡಿಕೆ ಸರಣಿ ಟ್ವೀಟ್‌

ಬೆಂಗಳೂರು: ಕಳೆದ 13 ದಿನಗಳಿಂದ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗುತ್ತಲೇ ಇದೆ. ಇದುವರೆಗೆ 12 ಬಾರಿ ಡೀಸೆಲ್‌, ಪೆಟ್ರೋಲ್‌ ಬೆಲೆ ಏರಿಕೆಯಾಗಿದ್ದು, 13 ದಿನದಲ್ಲಿ ಒಟ್ಟು 8 ರೂಪಾಯಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿದ್ದಾರೆ. ಹಲಾಲ್‌ ಹಾಲಾಹಲದ ನಡುವೆ ಬೆಲೆ ಏರಿಕೆ ಬರಸಿಡಿಲಿನಂತೆ ಅಪ್ಪಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಹೆಚ್‌.ಡಿ.ಕುಮಾರಸ್ವಾಮಿ ಮಾಡಿರುವ ಸರಣಿ ಟ್ವೀಟ್‌ಗಳ ವಿವರ ಇಲ್ಲಿದೆ:

ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ! ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!!

13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., (ಇಂದಿನ ಹೆಚ್ಚಳ:88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ. 
2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು. 
ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ. 
Share Post