Bengaluru

ರಾಜ್ಯದಲ್ಲಿ ಎಡೆಬಿಡದೆ ಮಳೆ; ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು; ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆ ಅವಾಂತರ ಸೃಷ್ಟಿಸುತ್ತಿದೆ. ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಜನವಸತಿ ಪ್ರದೇಶಗಳು ಜಲಾವೃತವಾಗಿವೆ. ರಸ್ತೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ. ಪ್ರಯಾಣಿಕರು ಪರದಾಡುವಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯೂ ಜೋರು ಮಳೆ ಸುರಿಯುತ್ತಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗಳಿಗೆ ಇಂದು (ಮೇ19) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಅಂಗನವಾಡಿಗಳಿಗೂ ಸಹ ರಜೆ ಸಿಕ್ಕಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ರಜೆ ನೀಡಿರುವ ದಿನದ ಕರ್ತವ್ಯವನ್ನು ಮುಂದಿನ ರಜಾದಿನಗಳಲ್ಲಿ ನಿರ್ವಹಿಸಬೇಕೆಂಬ ಷರತ್ತನ್ನು ವಿಧಿಸಲಾಗಿದೆ. ಜಿಲ್ಲೆಯಾದ್ಯಂತ ಒಂದರಿಂದ 10ನೇ ತರಗತಿವರೆಗೆ ರಜೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Share Post