ಆಗಸ್ಟ್ 28ರಂದು ದೊಡ್ಡ ಬಳ್ಳಾಪುರದಲ್ಲಿ ಬಿಜೆಪಿಯಿಂದ ಜನೋತ್ಸವ
ಬೆಂಗಳೂರು; ಆಗಸ್ಟ್ 28ರಂದು ದೊಡ್ಡ ಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಸಲು ಬಿಜೆಪಿ ತೀರ್ಮಾನ ಮಾಡಿದೆ. ಹಿಂದೂ ಪರ ಸಂಘಟೆನ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಜುಲೈ 28 ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು. ಇದೀಗ ಅದೇ ಸ್ಥಳದಲ್ಲಿ ನಾಲ್ಕು ಜಿಲ್ಲೆಗಳಿಗೆ ಸೀಮಿತವಾಗಿ ಜನೋತ್ಸವ ನಡೆಸಲು ತೀರ್ಮಾನ ಮಾಡಲಾಗಿದೆ.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಪೂರ್ತಿಯಾದ ಕಾರಣಕ್ಕಾಗಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸರ್ಕಾರದ ಯೋಜನೆಗಳನ್ನು ಜನರ ಮುಂದಿಡುವುದಕ್ಕೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದ್ರೆ ಪ್ರವೀಣ್ ಹತ್ಯೆಯ ನಂತರ ಬಿಜೆಪಿಯಲ್ಲೇ ಅಪಸ್ವರಗಳು ಕೇಳಿಬಂದವು. ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ಸೀಮಿತವಾಗಿ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಸಲು ತೀರ್ಮಾನಿಸಲಾಗಿದೆ. ಅನಂತರ ಹಂತ ಹಂತವಾಗಿ ರಾಜ್ಯದ ನಾಲ್ಕೈದು ಸ್ಥಳಗಳಲ್ಲಿ ಸಮವೇಶ ಮಾಡಲು ರಾಜ್ಯ ಬಿಜೆಪಿ ತೀರ್ಮಾನ ಮಾಡಿದೆ.