BengaluruPolitics

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ..?; ಏನಿದು ಬಿಜೆಪಿ ಲೆಕ್ಕಾಚಾರ..?

ಬೆಂಗಳೂರು; ವಿಧಾನಸಭಾ ಚುನಾವಣೆಯ ಸೋಲಿನ ನಂತರ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಎಚ್ಚೆತ್ತಂತೆ ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ ಗೆಲ್ಲೋದಕ್ಕೆ ರಾಜ್ಯದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲು ಚಿಂತನೆ ನಡೆಸಿವೆ ಎಂದು ಹೇಳಲಾಗುತ್ತಿದೆ. ಕಳೆದ ಬಾರಿ ರಾಜ್ಯದ 28 ಸಂಸತ್‌ ಸ್ಥಾನಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಆದ್ರೆ ಈ ಬಾರಿ ಅಷ್ಟು ಸೀಟು ಗೆಲ್ಲೋದು ಕಷ್ಟ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟು ಬರದಂತೆ ನೋಡಿಕೊಳ್ಳಲು ಬಿಜೆಪಿ ರಾಜ್ಯ ನಾಯಕರು ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್‌ನ್ನು ಎದುರಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಜೆಪಿಗೆ ಈ ಬಾರಿ 16 ರಿಂದ 18 ಕ್ಷೇತ್ರಗಳ ಮೇಲೆ ವಿಶ್ವಾಸವಿದೆ. ಆ ಕ್ಷೇತ್ರಗಳ ಮೇಲೆ ಬಿಜೆಪಿ ಹೆಚ್ಚು ಕಣ್ಣಿಡಲಿದೆ ಎಂದು ಹೇಳಲಾಗುತ್ತಿದೆ. ಇನ್ನು 20 ರಿಂದ 22 ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಉಳಿದ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ಆರರಿಂದ ಎಂಟು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಮೂರು ದಿನಗಳ ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿಯವರು ದೆಹಲಿಗೆ ತೆರಳಿದ್ದರು. ಈ ವೇಳೆ ಅವರು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆಗೂ ಮೊದಲೇ ಜಿಲ್ಲಾ ಪಂಚಾಯತ್‌ ಚುನಾವಣೆ ನಡೆಯಲಿದ್ದು, ಪ್ರಾಯೋಗಿಕವಾಗಿ ಈ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ ಹಾಲಿ ಸಂಸದರಲ್ಲಿ ಕೆಲವರು ನಿಷ್ಕ್ರಿಯರಾಗಿದ್ದಾರೆ. ಕೆಲವರಿಗೆ ವಯಸ್ಸಾಗಿದ್ದು, ಕೆಲವರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ 12ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹೊಸಬರಿಗೆ ಟಿಕೆಟ್‌ ನೀಡಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Share Post