ಎಂಇಎಸ್ ಪುಂಡಾಟಿಕೆಗೆ ಆಕ್ರೋಶ; ಕರ್ನಾಟಕ ಬಂದ್‌ಗೆ ಕರೆ ಸಾಧ್ಯತೆ
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ ಪುಂಡಾಟಿಕೆ ಘಟನೆಯನ್ನು ಕನ್ನಡ ಪರ ಹೋರಾಟಗಾರರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಬಂದ್ ನಡೆಸಲು ಚಿಂತನೆ ನಡೆಸುತ್ತಿದ್ದಾರೆ.
ಒಂದು ಕನ್ನಡ ಪರ ಸಂಘಟನೆಗಳು ಇಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಆದರೆ ಪೊಲೀಸರು ಅರ್ಧ ದಾರಿಯಲ್ಲೇ ಅವರನ್ನು ತಡೆದು ಬಂಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಕನ್ನಡಪರ ಹೋರಾಟಗಾರರು ಹೋರಾಟವನ್ನು ತೀವ್ರಗೊಳಿಸಲು ಚಿಂತನೆ ನಡೆಸುತ್ತಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಬುಧವಾರ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಕನ್ನಡ ಪರ ಸಂಘಟನೆಗಳ ಎಲ್ಲಾ ಮುಖಂಡರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಕರ್ನಾಟಕ ಬಂದ್‌ಗೆ ದಿನಾಂಕ ನಿಗದಿ ಮಾಡಿ, ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡಲು ಸರ್ಕಾರದ ಮೇಲೆ ಒತ್ತಡ ತರುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.