Bengaluru

ಬೆಂಗಳೂರು ಸಮೀಪದ ನಾಲ್ಕು ನಗರಗಳನ್ನು ಉಪನಗರಗಳಾಗಿ ಅಭಿವೃದ್ಧಿಗೆ ಚಿಂತನೆ

ಬೆಂಗಳೂರು; ಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಕೊರತೆ, ಟ್ರಾಫಿಕ್ ಜಾಮ್, ವ್ಯಾಪಕ ಜನಸಂದಣಿಯಿಂದಾಗಿ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸುತ್ತಮುತ್ತಲ 4 ನಗರಗಳನ್ನು ಉಪ-ನಗರಗಳಾಗಿ ರೂಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯದ ವಿವಿಧೆಡೆ 6 ನಗರಗಳಲ್ಲಿ ಸಮಗ್ರ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿಗೆ ಸಮೀಪವಿರುವ ನಗರ-ಪಟ್ಟಣಗಳಲ್ಲಿ ಮೂಲಸೌಕರ್ಯಗಳನ್ನು ಉನ್ನತ ಮಟ್ಟಕ್ಕೆ ಏರಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಪಟ್ಟಣಗಳನ್ನು ಉಪ-ನಗರಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ನೆಲಮಂಗಲ ಪಟ್ಟಣದ ಮೂಲಕವೇ ಕರಾವಳಿ, ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜನರು ಬೆಂಗಳೂರಿಗೆ ಪ್ರವೇಶಿಸುತ್ತಾರೆ. ಹಿಂದೂಪುರ ಮಾರ್ಗದಲ್ಲಿರುವ ದೊಡ್ಡಬಳ್ಳಾಪುರದಲ್ಲಿ ಬೃಹತ್ ಕೈಗಾರಿಕಾ ವಸಾಹತು ಸ್ಥಾಪನೆಯಾಗಿದೆ. ಇಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಸೇರಿದಂತೆ ಹಲವು ಪ್ರಮುಖ ಕಾರ್ಖಾನೆಗಳು ಸ್ಥಾಪನೆಯಾಗಿದ್ದು ಬೆಂಗಳೂರಿನಿಂದ ಪ್ರತಿದಿನ ಸಾವಿರಾರು ಜನರು ಓಡಾಡುತ್ತಾರೆ. ಹೈದರಾಬಾದ್ ಮಾರ್ಗದಲ್ಲಿರುವ ದೇವನಹಳ್ಳಿಯು ಬೆಂಗಳೂರಿನೊಂದಿಗೆ ಉತ್ತಮ ರಸ್ತೆ ಹಾಗೂ ರೈಲು ಸಂಪರ್ಕ ಹೊಂದಿದ್ದು, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸನಿಹದಲ್ಲಿಯೇ ಇದೆ.

ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಾಗಿರುವ ಕಾರಣ ನಗರದ ವ್ಯಾಪ್ತಿಯನ್ನು ಹಿಗ್ಗಸಲು ಸರ್ಕಾರವು ಚಿಂತನೆ ನಡೆಸುತ್ತಿದೆ. ಬೆಂಗಳೂರಿನ ಮೂಲಸೌಕರ್ಯವನ್ನು ಸಮಗ್ರವಾಗಿ ಮರುರೂಪಿಸಿ ಉನ್ನತೀಕರಣಗೊಳಿಸಬೇಕಿದೆ. ನಾವು ಹೊಸ ಬೆಂಗಳೂರಿನ ಬಗ್ಗೆ ಯೋಚಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Share Post