ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಇದು: ಹೆಚ್ಡಿಕೆ
ಬೆಂಗಳೂರು: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ತಡರಾತ್ರಿ ಎಂಇಎಸ್ ಪುಂಡರು ನಡೆಸಿರುವ ದಾಂದಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಇಂಥ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಘಟನೆ ಕುರಿತಂತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪುಂಡರ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕು. ಮತ್ತೆ ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.