BengaluruPolitics

ಲೋಕಸಭಾ ಚುನಾವಣೆಗಾಗಿ ಸಿದ್ಧತಾ ಸಭೆ

ಬೆಂಗಳೂರು; ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಸಂಬಂಧ ಎಲ್ಲಾ ಅಧಿಕಾರಿಗಳು ಸಮನ್ವಯ ಸಾಧಿಸಿ ಕಾಲಕಾಲಕ್ಕೆ ಚುನಾವಣಾ ಆಯೋಗದಿಂದ ಬರುವ ನಿರ್ದೇಶನಗಳು/ಸುತ್ತೋಲೆಗಳನ್ನು ಸರಿಯಾಗಿ ಪಾಲಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಿ ಎಲ್ಲಿಯೂ ಉಲ್ಲಂಘನೆಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳನ್ನು ತೆಗೆಯಲು ಸೂಚನೆ:

ಸಾರ್ವತ್ರಿಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕೂಡಲೆ, ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಯಾರಾದರು ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಬೇಕೆಂದು ಸೂಚನೆ ನೀಡಿದರು.

ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ. ಇದ್ದರೆ ಕೂಡಲೆ ಅದನ್ನು ತೆಗೆಯುವುದು ಅಥವಾ ಬಟ್ಟೆಯ ಮೂಲಕ ಕಾಣದಂತೆ ಮುಚ್ಚಬೇಕೆಂದು ಸೂಚನೆ ನೀಡಿದರು.

ರಸ್ತೆ ಬದಿಯಿರುವ ನಾಮಫಲಕಗಳಲ್ಲಿರುವ ಜನಪ್ರತಿನಿಧಿಗಳ ಹೆಸರುಗಳನ್ನು ತೆಗೆಯಬೇಕು. ಎಲ್ಲೂ ಜನಪ್ರತಿನಿಧಿಗಳ ಹೆಸರಾಗಲಿ, ಸಂಪರ್ಕ ಸಂಖ್ಯೆಯಾಗಲಿ ಇರುವಂತಿಲ್ಲ. ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದಾದರು ಕಾರ್ಯಕ್ರಮ ಆಯೋಜಿಸಿದ್ದಲ್ಲಿ ತತ್‌ಕ್ಷಣ ಅದನ್ನು ರದ್ದುಪಡಿಸಬೇಕು. ಚುನಾವಣೆ ಮುಗಿಯುವವರೆಗೆ ಯಾವುದೇ ಕಾರ್ಯಕ್ರಮ ಆಯೋಜಿಸುವಂತಿಲ್ಲ ಎಂದು ತಿಳಿಸಿದರು.

24 ಗಂಟೆಗಳ ಒಳಗೆ *ಸರ್ಕಾರಿ ಅಧಿಕೃತ ವೆಬ್‌ಸೈಟ್‌ ಗಳಲ್ಲಿ* ರಾಜಕೀಯ ಪ್ರತಿನಿಧಿಗಳ ಛಾಯಾಚಿತ್ರಗಳನ್ನು ತೆಗೆಯಲು‌ ಸೂಚಿಸಿದರು.

ನಿಯಂತ್ರಣ ಕೊಠಡಿ ಸ್ಥಾಪನೆ:

ಲೋಕ ಸಭಾ ಚುನಾವಣೆ ಹಿನ್ನೆಲೆ  ಚುನಾವಣಾಧಿಕಾರಿ(RO), ಮತದಾರ ನೋಂದಣಾಧಿಕಾರಿ(ARO) ರವರ ಕಚೇರಿಗಳಲ್ಲಿ 24 ಗಂಟೆಯೊಳಗಾಗಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ಸೂಚಿಸಿದರು.

ತಂಡಗಳನ್ನು ಸಕ್ರಿಯಗೊಳಿಸಿ‌ ಹಾಗೂ ಚೆಕ್ ಪೋಸ್ಟ್ ಅಳವಡಿಸಿ:

ಚುನಾವಣೆಯ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ‌ ಮೇಲೆ‌ ನಿಗಾವಹಿಸಲು ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗನ್ನು ಸಕ್ರಿಯಗೊಳಿಸಬೇಕು. ಜೊತೆಗೆ ಪ್ರಮುಖ ಸ್ಥಳಗಳಲ್ಲಿ ಕೂಡಲೆ ಚೆಕ್ ಪೂಸ್ಟ್ ಗಳನ್ನು ಅಳವಡಿಸಬೇಕೆಂದು ಸೂಚನೆ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಎಂಸಿಸಿ ನೋಡಲ್ ಅಧಿಕಾರಿಯಾದ ಮುನೀಶ್ ಮೌದ್ಗಿಲ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ಹರೀಶ್ ಕುಮಾರ್, ಡಾ. ಕೆ ದಯಾನಂದ್, ವಿನೋತ್ ಪ್ರಿಯಾ, ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share Post