Bengaluru

ಮತ್ತೆ ತಮಿಳುನಾಡಿಗೆ ನೀರು ಬಿಡಲು ಸೂಚನೆ ಹಿನ್ನೆಲೆ; ಇಂದು ತುರ್ತು ಸರ್ವಪಕ್ಷ ಸಭೆ

ಬೆಂಗಳೂರು; ಕಾವೇರಿ ನೀರು ನಿಯಂತ್ರಣಾ ಸಮಿತಿ ಕಳೆದ ಬಾರಿ ಹೇಳಿದಂತೆ ದಿನಕ್ಕೆ 5 ಸಾವಿರ ಕ್ಯೂಸೆಕ್‌ನಂತೆ 15 ದಿಗಳ ಕಾಲ ತಮಿಳುನಾಡಿಗೆ ನೀರು ಬಿಡಲಾಗಿತ್ತು. ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದರೂ ಆದೇಶ ಪಾಲಿಸಲಾಗಿತ್ತು. ಇದೀಗ ನೀರು ಸಂಗ್ರಹ ಇಲ್ಲ ಎಂದು ಹೇಳಿದರೂ, ಕಾವೇರಿ ನೀರು ನಿಯಂತ್ರಣಾ ಸಮಿತಿ, ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಈ ಬಗ್ಗೆ ಚರ್ಚೆ ಮಾಡೋದಕ್ಕೆ ಇಂದು ತುರ್ತು ಸರ್ವಪಕ್ಷ ಸಭೆ ಕರೆಯಲಾಗಿದೆ. ವಿಧಾನಸೌಧದ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ವಿಪಕ್ಷಗಳ ನಾಯಕರು, ಕಾವೇರಿ ಜಲಾನಯನ ವ್ಯಾಪ್ತಿಯ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್‌ ಸದಸ್ಯರು, ಮಾಜಿ ಸಿಎಂಗಳು ಪಾಲ್ಗೊಳ್ಳಲಿದ್ದಾರೆ.

ಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸುನ್ನು ಪಾಲನೆ ಮಾಡದಿರಲು ಈ ಸಭೆಯಲ್ಲಿ ತೀರ್ಮಾನ ಮಾಡುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಬಗ್ಗೆ ತೀರ್ಮಾನಿಸಿ, ದಿನಾಂಕವನ್ನು ನಿಗದಿ ಮಾಡುವ ಸಾಧ್ಯತೆ ಇದೆ. ಇನ್ನು ಸಭೆ ಮುಗಿದ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

 

Share Post