BengaluruPolitics

ಸಚಿವ ಸ್ಥಾನ ಸಿಗದಿದ್ದಕ್ಕೆ ಭುಗಿಲೆದ್ದ ಅಸಮಾಧಾನ; ಬೆಂಬಲಿಗನಿಂದ ಆತ್ಮಹತ್ಯೆ ಬೆದರಿಕೆ

ಬೆಂಗಳೂರು; ಇನ್ನೇನು ಕೆಲವೇ ಸಮಯದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜಭನವದಲ್ಲಿ ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ. ಈ ಬೆನ್ನಲ್ಲೇ ಹಲವು ನಾಯಕರು ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ. ಅವರ ಬೆಂಬಲಿಗರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಬಯಸಿದ್ದರು. ಜೊತೆಗೆ ಪ್ರಮುಖ ಖಾತೆ ಸಿಗುವ ವಿಶ್ವಾಸ ಹೊಂದಿದ್ದರು. ಆದ್ರೆ ಬಿ.ಕೆ.ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಬಿ.ಕೆ.ಹರಿಪ್ರಸಾದ್‌ ಅವರು ಈಡಿಗ ಸಮುದಾಯಕ್ಕೆ ಸೇರಿದ್ದು, ಈಡಿಗ ಸಮುದಾಯದಲ್ಲಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ. ಹೀಗಾಗಿ ಅವರು, ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪರಿಷತ್‌ ಸ್ಥಾನಕ್ಕೂ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಚಾಮರಾಜನಗರದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಸೋಲಿಸಿದ್ದ ಪುಟ್ಟರಂಗಶೆಟ್ಟಿಯವರು ಕೂಡಾ ಸಚಿವ ಸ್ಥಾನ ಬಯಸಿದ್ದರು. ಆದ್ರೆ ಅವರಿಗೂ ಈ ಬಾರಿ ಸಚಿವ ಸ್ಥಾನ ಸಿಕ್ಕಿಲ್ಲ. ಇದರಿಂದಾಗಿ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಪುಟ್ಟರಂಗ ಶೆಟ್ಟಿಗೆ ಸಚಿವ ಸ್ಥಾನ ನೀಡದೇ ಉಪ್ಪಾರ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇನ್ನು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾನೆ. ಪುಟ್ಟರಂಗ ಶೆಟ್ಟ ಅಭಿಮಾನಿ ಚಂದ್ರಶೇಖರ್‌ ಎಂಬಾರ ಪತ್ರ ಬರೆದಿದ್ದು, ನಾನು ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಇದಕ್ಕೆ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ ಗಾಂದಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಕಾರಣ ಎಂದು ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಇನ್ನು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿದ್ದ ಮಾಜಿ ಸಚಿವ ಲಕ್ಷ್ಮಣ ಸವದಿಗೆ ಕೂಡಾ ಸಚಿವ ಸ್ಥಾನ ಕೈತಪ್ಪಿದೆ. ಇದರಿಂದ ಅವರ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

Share Post