Bengaluru

ಕಾಂಗ್ರೆಸ್‌ ಕೊರೊನಾ ಹರಡುವ ಕೆಲಸ ಮಾಡ್ತಿದೆ: ಎಸ್‌.ಟಿ.ಸೋಮಶೇಖರ್

ಬೆಂಗಳೂರು:  ಜನರ ಜೀವರಕ್ಷಣೆ ಹೊಣೆ ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಚುನಾಯಿತ ಜನಪ್ರತಿನಿಧಿಗಳೆಲ್ಲರೂ ನಾಗರಿಕರ ಹಿತ ಕಾಯಬೇಕು. ಕೋವಿಡ್ ನಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ನಿಂತು ಸಲಹೆಗಳನ್ನು ನೀಡುವ ಮೂಲಕ ಜನಹಿತ ಕಾಪಾಡಬೇಕಿದ್ದ ಪ್ರತಿಪಕ್ಷ ಕಾಂಗ್ರೆಸ್, ಪಾದಯಾತ್ರೆ ಹೆಸರಿನಲ್ಲಿ ಕೊರೋನಾ ಹರಡುವ ಮೂಲಕ ಅಮಾಯಕ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಇದರ ನಿಯಂತ್ರಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ. ಇದರ ನಡುವೆ ಕಾಂಗ್ರೆಸ್ ಪಾದಯಾತ್ರೆ ಹೆಸರಿನಲ್ಲಿ ಜನರ ಗುಂಪು ಕಟ್ಟಿಕೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿದೆ.

ಈಗಾಗಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಎಚ್.ಎಂ.ರೇವಣ್ಣ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇವರ ಜೊತೆಯಲ್ಲಿ ಹೆಜ್ಜೆ ಹಾಕಿದವರಿಗೂ ಸೋಂಕು ಹರಡಲಿದೆ. ಜನಜಾತ್ರೆ ಮಾಡಿಕೊಂಡು ಬೆಂಗಳೂರಿಗೆ ಕೋವಿಡ್ ಹಬ್ಬಿಸುವ ಕೆಲಸ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಕೊರೋನಾ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಮೇಕೆದಾಟು ಯೋಜನೆ ಬಗ್ಗೆ ಆಸಕ್ತಿ ಇದ್ದಿದ್ದರೆ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್, ತಮಿಳುನಾಡಿನ ಮುಖ್ಯಮಂತ್ರಿ ಜೊತೆ ಮಾತನಾಡಬಹುದಿತ್ತು. ಸುಪ್ರೀಂ ಕೋರ್ಟ್ ನಲ್ಲಿರುವ ದಾವೆಯನ್ನು ಹಿಂಪಡೆಯುವಂತೆ ಡಿಎಂಕೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿತ್ತು. ಆದರೆ ಕಾಂಗ್ರೆಸ್ ಆ ರೀತಿ ಮಾಡುವುದಿಲ್ಲ, ಏಕೆಂದರೆ ಅವರಿಗೆ ಸಮಸ್ಯೆಯನ್ನು ಬಗೆಹರಿಸುವುದಕ್ಕಿಂತ ಅದನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದರಲ್ಲೇ ಹೆಚ್ಚು ಆಸಕ್ತಿ ಎಂದು ದೂರಿದರು.

 

Share Post