Bengaluru

ಬಿಜೆಪಿ ಸರ್ಕಾರ ಸೈನಿಕರ ಅನ್ನ ಕಸಿಯಲು ಹೊರಟಿದೆ; ಸಿದ್ದರಾಮಯ್ಯ

ಬೆಂಗಳೂರು; ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ ಜಾರಿಗೆ ತರುತ್ತಿರುವುದಕ್ಕೆ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚಾಗುತ್ತಿದೆ. ಈ ನಡುವೆ ಕಾಂಗ್ರೆಸ್‌ ಕೂಡಾ ಇದರ ವಿರುದ್ಧ ಧ್ವನಿ ಎತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ್ದಾರೆ. ಮೋದಿ ನೇತೃತ್ವದ ಮೋದಿ ಸರ್ಕಾರ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿತ್ತು. ಆದ್ರೆ, ಎರಡು ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗಳು ಇಲ್ಲಿವೆ;

 

ಟ್ವೀಟ್‌-೧

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ @BJP4India  ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ!.

ಟ್ವೀಟ್‌-೨

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ @BJP4India  ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ.

ಟ್ವೀಟ್‌-೩

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ಟ್ವೀಟ್‌-೪

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ @BJP4India  ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?

ಟ್ವೀಟ್‌-೫

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ @narendramodi  ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?

Share Post