ಅಲ್ಪಸಂಖ್ಯಾತ ಸಮುದಾಯ ಬೆದರಿಸುವ ಹುನ್ನಾರ; ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ರಾಜ್ಯ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ. ಹೀಗಾಗಿ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದಿರುವ ಸಿದ್ದರಾಮಯ್ಯ, ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಎಂದು ಪ್ರಶ್ನೆ ಮಾಡಿದ್ದಾರೆ.
ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಮನವಿ ಮಾಡಿದ್ದಾರೆ.