ವರ್ಗಾವಣೆ ಲಿಸ್ಟ್‌ನಲ್ಲಿ ವಿವೇಕಾನಂದ ಹೆಸರು; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಸಮರ
ಬೆಂಗಳೂರು; ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ ಮೊಬೈಲ್ ಸಂಭಾಷಣೆಯಲ್ಲಿ ಪ್ರಸ್ತಾಪವಾದ ವಿವೇಕಾನಂದ ಹೆಸರು ಈಗ ಮತ್ತೆ ಸದ್ದು ಮಾಡುತ್ತಿದೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಅದರಲ್ಲಿ ವಿವೇಕಾನಂದ ಹೆಸರು ಇದೆ. ಹೀಗಾಗಿ ಇದೇ ವಿವೇಕಾನಂದ ಹೆಸರು ಮೊನ್ನೆ ಪ್ರಸ್ತಾಪ ಮಾಡಿರೋದು ಅಂತ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್‌ಳನ್ನು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.
ಟ್ವೀಟ್-೧;
“ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ”
ಟ್ವೀಟ್-೨;
“ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ..?”
ಟ್ವೀಟ್-೩;
“ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತು ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು”
ಟ್ವೀಟ್-೪;
“ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್ ಇನಸ್ಪೆಕ್ಟರ್ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಏನಂತೀರಿ?”
ಟ್ವೀಟ್-೫;
“ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ ಮತ್ತು ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಟಿಸಿಎಮ್ ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-ಡಿಸಿಎಮ್ ನಿರ್ದೇಶಕ.. ಹೇಗಿದೆ?
ಹೀಗಂತ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.