ಬಿಲ್ಕಿಸ್ ಬಾನೋ ಪ್ರಕರಣ; ಅಪರಾಧಿಗಳ ಬಿಡುಗಡೆ ಅಧಿಕಾರ ಗುಜರಾತ್ ಸರ್ಕಾರಕ್ಕಿಲ್ಲ
ಗುಜರಾತ್ ಗಲಭೆ ಸಂತ್ರಸ್ತೆ ಬಿಲ್ಕಿಸ್ ಬಾನೋ ಮೇಲಿನ ಸಾಮೂಹಿಕ ಅತ್ಯಾಚಾರದ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಗುಜರಾತ್ ಸರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
2002ರ ಗುಜರಾತ್ ಗಲಭೆಯಲ್ಲಿ ತನ್ನ ಕುಟುಂಬದ ಏಳು ಸದಸ್ಯರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯಲ್ಲಿ ಶಿಕ್ಷೆಗೊಳಗಾದವರನ್ನು ಬಿಡುಗಡೆ ಮಾಡುವುದನ್ನು ಬಿಲ್ಕಿಸ್ ಬಾನೊ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಕಳೆದ ವರ್ಷ ಅಕ್ಟೋಬರ್ 12 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಈ ಕುರಿತು ಇಂದು ತೀರ್ಪು ನೀಡಿದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಕಕ್ಷಿದಾರರಾಗಿರುವ ಗುಜರಾತ್ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರವಿಲ್ಲ ಎಂದು ಹೇಳಿದೆ. ಪ್ರಕರಣದ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮಾತ್ರ ಅವರನ್ನು ಬಿಡುಗಡೆ ಮಾಡುವ ಅಧಿಕಾರವಿದೆ ಎಂದೂ ಅದು ಸ್ಪಷ್ಟಪಡಿಸಿದೆ.
ಎಲ್ಲಾ ಆರೋಪಿಗಳು 2 ವಾರಗಳಲ್ಲಿ ಜೈಲು ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.